ನವದೆಹಲಿ / ಬೆಂಗಳೂರು:
ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ–ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ
ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವ
ಭೂಪೇಂದ್ರ ಯಾದವ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಸಂಸತ್ ಭವನದಲ್ಲಿರುವ ಅರಣ್ಯ ಸಚಿವರ ಕಚೇರಿಯಲ್ಲಿ ನಡೆದ ಭೇಟಿಯ ವೇಳೆ, ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಶಿವಮೊಗ್ಗ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಹೆಚ್ಚಾಗಿ ಸಂಭವಿಸುತ್ತಿರುವ ಆನೆ ದಾಳಿ ಸೇರಿದಂತೆ ವನ್ಯಜೀವಿ ಉಪಟಳದ ಬಗ್ಗೆ ವಿವರವಾಗಿ ಚರ್ಚಿಸಲಾಯಿತು.
ಅರಣ್ಯದ ಅಂಚಿನ ಪ್ರದೇಶಗಳಲ್ಲಿ ಕೃಷಿ ಮಾಡುವ ರೈತರು ಹಾಗೂ ದನಕರುಗಳನ್ನು ಮೇಯಿಸುವ ಜನರು ನಿರಂತರವಾಗಿ ಅಪಾಯಕ್ಕೆ ಒಳಗಾಗುತ್ತಿದ್ದಾರೆ. ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದು, ಇನ್ನೂ ಕೆಲವರು ಗಾಯಗೊಂಡು ಶಾಶ್ವತ ಅಂಗವೈಕಲ್ಯಕ್ಕೆ ತುತ್ತಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಉಲ್ಬಣಗೊಂಡಿರುವ ಮಾನವ–ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಅಗತ್ಯವಿದೆ ಎಂದು ಕುಮಾರಸ್ವಾಮಿ ಅವರು ಮನವಿ ಮಾಡಿದರು.
ಈ ಕುರಿತು ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಬಜೆಟ್ ಅಧಿವೇಶನ ಮುಗಿಯುವ ಮೊದಲು ಸಂಪೂರ್ಣ ಮಾಹಿತಿ ಸಲ್ಲಿಸುವಂತೆ ಸಚಿವ ಭೂಪೇಂದ್ರ ಯಾದವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಸಮಸ್ಯೆ ನಿವಾರಣೆಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.